


ಮಂಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನದ ಕುರಿತು ಗುರುವಾರ ನಡೆದ ದ.ಕ. ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ವಿರೋಧ ವ್ಯಕ್ತಪಡಿಸಿದ್ದು, ಈ ವಿರೋಧದ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವಂತೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಬಾಧಿತ 43 ಗ್ರಾಮಗಳಿಂದ ಕೇಂದ್ರ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರಿಗೆ ನಿರ್ದೇಶನ ನೀಡಿದ್ದಾರೆ.





ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.


ಬೆಳ್ತಂಗಡಿ, ಕಡಬ, ಸುಳ್ಯ, ಪುತ್ತೂರಿನ 43 ಗ್ರಾಮಗಳು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುತ್ತವೆ. ಇದಕ್ಕೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ವೆಬ್ಸೈಟ್ ನಲ್ಲಿ ಆನ್ಲೈನ್ ಮೂಲಕ ಆಕ್ಷೇಪ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಆಕ್ಷೇಪಗಳು ನೇರವಾಗಿ ಕೇಂದ್ರ ಸರ್ಕಾರಕ್ಕೆ ತಲುಪುತ್ತವೆ. ಆಕ್ಷೇಪ ಸಲ್ಲಿಸಲು ಇನ್ನೂ ಅಂತಿಮ ದಿನ ನಿಗದಿಪಡಿಸಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ತಿಳಿಸಿದರು.
ಸಚಿವ ಖಾದರ್ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಆಕ್ಷೇಪಣೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿಶೇಷ ಗ್ರಾಮ ಸಭೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವೆಬ್ಸೈಟ್ನಲ್ಲಿ ಗ್ರಾಮ ಪಂಚಾಯ್ತಿಗಳು ಮತ್ತು ಜನರ ಅತೀ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಬೇಕು. ಆಕ್ಷೇಪಗಳನ್ನು ಅಪ್ಲೋಡ್ ಮಾಡಲು ಜನರಿಗೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿಗಳು ನೆರವು ನೀಡಬೇಕು, ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಪಕ್ಷಾತೀತ ವಿರೋಧ:
ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಪಕ್ಷಾತೀತವಾಗಿ ವಿರೋಧ ವ್ಯಕ್ತಪಡಿಸಿದರು. ವರದಿಯ ಸಾಧಕ- ಬಾಧಕಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರವು ಸೆ.21ರಿಂದ 23ರವರೆಗೆ ವಿಶೇಷ ಅಧಿವೇಶನ ಕರೆದಿದೆ, ಅಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಖಾದರ್ ಸಭೆಗೆ ಮಾಹಿತಿ ನೀಡಿದರು.
ಆರಂಭದಲ್ಲಿ ವಿಷಯ ಪ್ರಸ್ತಾಪ ಮಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕಸ್ತೂರಿರಂಗನ್ ವರದಿ ಜಾರಿಯಾದರೆ ಜಿಲ್ಲೆಯ ಜನರು ತಮ್ಮ ಭೂಮಿ ಕಳೆದುಕೊಳ್ಳುವ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಎದುರಿಸಲಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರವು ಆರು ಬಾರಿ ವರದಿಯನ್ನು ತಿರಸ್ಕರಿಸಿದ್ದರೂ ಕೇಂದ್ರ ಸರ್ಕಾರ ಮತ್ತೆ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದರು.
ಪಶ್ಚಿಮ ಘಟ್ಟದ ಚೈನ್ ಸರ್ವೇ ನಡೆಸಿ- ಹರೀಶ್ ಪೂಂಜಾ:
ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟ ಪ್ರದೇಶದ ‘ಚೈನ್ ಸರ್ವೇ’ ನಡೆಸಬೇಕು. ಬ್ರಿಟಿಷರ ಕಾಲದಲ್ಲಿ ನಡೆದ ಚೈನ್ ಸರ್ವೇ ಬಳಿಕ ಸರ್ವೇ ಆಗಿಲ್ಲ. ಈಗ ಚೈನ್ ಸರ್ವೇ ನಡೆಸಿದರೆ ಅಗತ್ಯಕ್ಕಿಂತ ಜಾಸ್ತಿ ಭೂಮಿ ಸಿಗಲಿದೆ ಎಂದು ಶಾಸಕ ಹರೀಶ್ ಪೂಂಜಾ ಒತ್ತಾಯಿಸಿದರು. ಅಲ್ಲದೆ, ವರದಿಯನ್ನು ವಿರೋಧಿಸಿ ವಿಶೇಷ ಗ್ರಾಮ ಸಭೆಗಳನ್ನು ನಡೆಸಿ ನಿರ್ಣಯ ಅಂಗೀಕರಿಸುವಂತೆ ಬಾಧಿತ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರ ಸೂಚನೆ ನೀಡಬೇಕು. ಮಾನವ ವಸತಿ ಪ್ರದೇಶಗಳು ಮತ್ತು ಕೃಷಿ ಭೂಮಿಯನ್ನು ಹೊರತುಪಡಿಸಿ ‘ಶೂನ್ಯ ಬಫರ್ ವಲಯ’ವನ್ನು ಗುರುತಿಸಬೇಕು ಎಂದು ಆಗ್ರಹಿಸಿದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿದರು. ಸೆಪ್ಟೆಂಬರ್ 20ರೊಳಗೆ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಕಸ್ತೂರಿರಂಗನ್ ವರದಿಯ ಸಾಧಕ- ಬಾಧಕಗಳ ಕುರಿತು ಸಂಕ್ಷಿಪ್ತ ಟಿಪ್ಪಣಿಯನ್ನು ಸಲ್ಲಿಸುವಂತೆ ಸಚಿವ ಖಾದರ್ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚಿಸಿದರು.
ಕಸ್ತೂರಿರಂಗನ್ ವರದಿ ಜಾರಿಗೆ ಪಕ್ಷಾತೀತವಾಗಿ ವಿರೋಧವಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಇತರ ಶಾಸಕರು ಕೂಡ ಕಸ್ತೂರಿರಂಗನ್ ವರದಿ ಜಾರಿಗೆ ತಮ್ಮ ಆಕ್ಷೇಪಗಳನ್ನು ವ್ಯಕ್ತಪಡಿಸಿದರು.








