ಎಸ್ಐಆರ್ ಅಕ್ರಮ, ಜ್ಞಾನೇಶ್ ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಬೃಹತ್ ಪಾದಯಾತ್ರೆ: ಜ್ಞಾನೇಶ್ ಕುಮಾರ್ ಬಂಧಿಸಿ, ಅವರು ನಡೆಸಿದ ಚುನಾವಣೆಗಳ ರದ್ದು ಮಾಡಿ: ಪದ್ಮರಾಜ್ ಒತ್ತಾಯ

ಮಂಗಳೂರು: ಕೇಂದ್ರ ಚುನಾವಣಾ ಆಯೋಗದ ಕಾರ್ಯ ನಿರ್ವಹಣೆ ಮತ್ತು ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೆ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ನಗರದ ಪಂಪ್ ವೆಲ್ ನಿಂದ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದವರೆಗೆ ಬೃಹತ್ ಪಾದಯಾತ್ರೆ ನಡೆಯಿತು.

ಪಂಪ್ ವೆಲ್ ಮಹಾವೀರ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಉರಿ ಬಿಸಿಲಿನಲ್ಲಿ ಪಡೀಲ್ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ಇದೇ ವೇಳೆ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಜ್ಞಾನೇಶ್ ಬಂಧಿಸಿ, ಚುನಾವಣೆ ರದ್ದು ಮಾಡಿ:

ನಂತರ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಸ್ವತಂತ್ರ ಸಂಸ್ಥೆಯಾಗಿ ಕಾರ್ಯ ನಿರ್ವಹಣೆ ಮಾಡಬೇಕಿದ್ದ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಣತಿಯಂತೆ ಕಾರ್ಯ ನಿರ್ವಹಿಸುವ ಮೂಲಕ ಸಂಸ್ಥೆಯ ಸ್ವಾಯತ್ತತೆಗೆ ಮತ್ತು ದೇಶದ ಸಂವಿಧಾನಕ್ಕೆ ಧಕ್ಕೆ ತಂದಿದ್ದಾರೆ. ಇಡೀ ಸಂಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನೇ ಧೂಳೀಪಟ ಮಾಡಿದ್ದಾರೆ. ತಕ್ಷಣ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಆಯುಕ್ತ ಸ್ಥಾನದಿಂದ ಕಿತ್ತೆಸೆದು ಬಂಧಿಸಬೇಕು. ಅವರು ನಡೆಸಿದ್ದ ಚುನಾವಣೆಗಳನ್ನು ರದ್ದು ಮಾಡಿ ಮರು ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯು ಮತದಾರರ ಸಂಖ್ಯೆಯನ್ನು ಕಡಿಮೆ ಮಾಡುವ ಹುನ್ನಾರ. ಸ್ಥಳಾಂತರಗೊಂಡವರು ಮತ್ತು ಮೃತಪಟ್ಟವರನ್ನು ಬಿಟ್ಟು ಉಳಿದ ಎಲ್ಲರೂ ನೈಜ ಮತದಾರರಾಗಿದ್ದು, ಅವರನ್ನು ಅನಗತ್ಯವಾಗಿ ಗುರಿ ಮಾಡಿ ತೊಂದರೆ ಕೊಡಲಾಗುತ್ತಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಮೋದಿ ಯುಗದ ಪತನ ಆರಂಭ:

ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಮಾತನಾಡಿ, ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಮಾಡಿದ ಆರೋಪಗಳೆಲ್ಲವೂ ಒಂದೊಂದಾಗಿ ಸತ್ಯವಾಗುತ್ತಿದೆ. ಓಟ್ ಚೋರಿ ಬಗ್ಗೆ ಮಾತನಾಡಿರುವುದು ಅಕ್ಷರಶಃ ನಿಜವಾಗಿದೆ. ಇದು ಮೋದಿಯ ಯುಗದ ಪತನದ ಅರಂಭ, 2029ರಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದರು.

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೊ, ಮುಖಂಡರಾದ ಇನಾಯತ್ ಅಲಿ, ಸಂತೋಷ್ ಕುಮಾರ್ ಶೆಟ್ಟಿ, ಮಮತಾ ಗಟ್ಟಿ, ಎಂ.ಶಶಿಧರ ಹೆಗ್ಡೆ, ಎಂ.ಎಸ್. ಮಹಮ್ಮದ್, ವಿಶ್ವಾಸ್ ಕುಮಾರ್ ದಾಸ್, ಕೆ.ಅಶ್ರಫ್, ಕೃಷ್ಣಪ್ಪ, ಪ್ರಕಾಶ್ ಸಾಲಿಯಾನ್, ಶಾಹುಲ್ ಹಮೀದ್, ಮೊಹಮ್ಮದ್ ಮೋನು ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here