


ಮಂಗಳೂರು: ಕಸ್ತೂರಿ ರಂಗನ್ ವರದಿಯಿಂದ ಕರಾವಳಿ, ಮಲೆನಾಡು ಪ್ರದೇಶದ ರೈತರು ಹಾಗೂ ಜನಸಾಮಾನ್ಯರ ಬದುಕಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಲು ಬಿಡಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.





ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.


ರಾಜ್ಯ ಸರ್ಕಾರ ಈ ಹಿಂದೆಯೇ ಕಸ್ತೂರಿ ರಂಗನ್ ವರದಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೆ ಮತ್ತೆ ಕೇಂದ್ರದಿಂದ ನಿರ್ದೇಶನ ಬಂದಿದ್ದರಿಂದ ಜನರಲ್ಲಿ ಆತಂಕ ಮೂಡಿದೆ. ರೈತರು ಹಾಗೂ ಜನಸಾಮಾನ್ಯರ ಹಿತ ಕಾಪಾಡುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆ. ನಾನೇ ಖುದ್ದಾಗಿ ಬಾಧಿತ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಕಷ್ಟಗಳನ್ನು ಕಂಡಿದ್ದೇನೆ. ಅಲ್ಲಿನ ರೈತರು, ಜನಸಾಮಾನ್ಯರು ಮತ್ತು ಹೋರಾಟಗಾರರು ಎದುರಿಸುತ್ತಿರುವ ವಾಸ್ತವ ಕಷ್ಟಗಳ ಬಗ್ಗೆ ನಮಗೆ ಸ್ಪಷ್ಟ ಅರಿವಿದೆ. ಜನರ ಬದುಕಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಈ ವಿಷಯದ ಕುರಿತು ಚರ್ಚಿಸುವುದಕ್ಕಾಗಿಯೇ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದ್ದು, ಎರಡು ದಿನ ಪೂರ್ಣ ಪ್ರಮಾಣದಲ್ಲಿ ರೈತರ ಸಮಸ್ಯೆಗಳ ಬಗ್ಗೆಯೇ ಚರ್ಚೆ ನಡೆಸಿ, ಎಲ್ಲ ಶಾಸಕರ ಅಭಿಪ್ರಾಯಗಳನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕರಾವಳಿಯ ಆರ್ಥಿಕ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ
ಮಂಗಳೂರಿನಲ್ಲಿ ಶುಕ್ರವಾರ ನಡೆಯಲಿರುವ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಆರ್ಥಿಕ ಅಭಿವೃದ್ಧಿ, ಯುವಜನತೆಗೆ ಉದ್ಯೋಗ ಸೃಷ್ಟಿ ಹಾಗೂ ಪ್ರವಾಸೋದ್ಯಮ ನೀತಿ ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ದೊರೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕರಾವಳಿ ಭಾಗವು ಉತ್ತಮ ಮಾನವ ಸಂಪನ್ಮೂಲ, ಶಿಕ್ಷಣ, ಆರೋಗ್ಯ ಮತ್ತು ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ. ಈ ಭಾಗದ ಬೀಚ್‌ಗಳು ಹಾಗೂ ಪ್ರವಾಸೋದ್ಯಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಮೂಲಕ ಸ್ಥಳೀಯ ಆರ್ಥಿಕತೆಗೆ ಬಲ ತುಂಬಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಉಮರ್ ಖಾಲಿದ್ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಆ ಹೇಳಿಕೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.








